ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಡಿ.ಶೆಟ್ಟಿ ಹಳ್ಳಿಯಲ್ಲಿ ಕಾಂಗ್ರೆಸ್ ವಿಜಯೋತ್ಸವ ಸಂದರ್ಭದಲ್ಲಿ ನಡೆದ ಬಿಜೆಪಿ ಕಾರ್ಯಕರ್ತನ ಹತ್ಯೆಗೆ ಸಂಬಂಧಿಸಿದಂತೆ ಹತ್ಯೆಗೀಡಾದವನ ಸಂಬಂಧಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.
ಕೃಷ್ಣಪ್ಪ (55) ಎನ್ನುವವರನ್ನು ಶನಿವಾರ ರಾತ್ರಿ ಹತ್ಯೆ ಮಾಡಲಾಗಿತ್ತು. ಈ ಸಂಬಂಧ ಇದೀಗ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಕೊಲೆಯಾದ ಕೃಷ್ಣಪ್ಪನ ಸೋದರಳಿಯ ಆದಿತ್ಯ (21) ಎಂಬಾತನನ್ನು ಪೊಲೀಸರು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.
ಶರತ್ ಬಚ್ಚೇಗೌಡ ವಿಜಯಶಾಲಿ ಎಂದು ಘೋಷಿಸಿದ ಕೂಡಲೇ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ಪ್ರಾರಂಭಿಸಿದರು. ಮಾಜಿ ಸಚಿವ ಎಂ. ಟಿ. ಬಿ. ನಾಗರಾಜ್ ವಿರುದ್ಧ ಎರಡನೇ ಬಾರಿ ಸ್ಪರ್ಧಿಸಿದ್ದ ಶರತ್ ಅವರು ಗೆಲುವು ಸಾಧಿಸಿದ್ದರು. ಈ ಹಿನ್ನೆಲೆಯಲ್ಲಿ ಶರತ್ ಬಚ್ಚೇಗೌಡ ಬೆಂಬಲಿಗರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ಮಾಡುತ್ತಿದ್ದರು. ಇದೇ ಸಂದರ್ಭದಲ್ಲಿ ಎಂಟಿಬಿ ನಾಗರಾಜ್ ಅವರ ಪ್ರಚಾರ ಮಾಡಿದ್ದ ಬಿಜೆಪಿ ಕಾರ್ಯಕರ್ತ ಕೃಷ್ಣಪ್ಪ (55) ಅವರ ಮನೆ ಮುಂದೆಯೂ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿದ್ದರು. ಈ ವೇಳೆ ತೀವ್ರ ವಾಗ್ವಾದ ಶುರುವಾಗಿದೆ. ಈ ವೇಳೆ ಕೃಷ್ಣಪ್ಪ ಅವರ ಮೇಲೆ ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿದೆ. ಕೂಡಲೇ ಮಧ್ಯೆ ಪ್ರವೇಶಿಸಿದ ಕೃಷ್ಣಪ್ಪ ಅವರ ಪತ್ನಿ ಹಾಗೂ ಮಗ ಬಾಬು ಅವರು, ಕೃಷ್ಣಪ್ಪ ಅವರನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಕೃಷ್ಣಪ್ಪ ಅವರು ಸಾವನ್ನಪ್ಪಿದ್ದಾರೆ.
ಈ ನಡುವೆ ಆರೋಪಿಗಳನ್ನು ಬಂಧನಕ್ಕೊಳಪಡಿಸುವಂತೆ ಒತ್ತಾಯಿಸಿ ಬಿಜೆಪಿಯ ಹಿರಿಯ ಮುಖಂಡರು ನಂದಗುಡಿ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ್ದರು. ಘಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಎಚ್ಚೆತ್ತ ಪೊಲೀಸರು, ನಾಲ್ವರು ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದರು.