ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮೇ 20 ಮತ್ತು 21ರಂದು 2023ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನಡೆಸಲಿದೆ.ಇಂಜಿನಿಯರಿಂಗ್, ಕೃಷಿ ವಿಜ್ಞಾನ, ವೆರ್ಟನರಿ, ಬಿ. ಎಸ್. ಸಿ ಮುಂತಾದ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕಾಗಿ ನಡೆಯುವ ಸಾಮಾನ್ಯ ಪ್ರವೇಶ ಪರೀಕ್ಷೆ ಇದಾಗಿದೆ.
ಸಿಇಟಿ ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಲು ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಅಗತ್ಯ ವ್ಯವಸ್ಥೆಗಳನ್ನು ಮಾಡಲಾಗಿದೆ. ಜಿಲ್ಲಾಧಿಕಾರಿಗಳು ಪರೀಕ್ಷೆ ಪೂರ್ವಭಾವಿ ಸಭೆಯನ್ನು ನಡೆಸಿ, ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದ್ದಾರೆ.
ಪರೀಕ್ಷೆಯ ವೇಳಾಪಟ್ಟಿ:
ಮೇ 20 ಮತ್ತು 21 ರಂದು ಬೆಳಗ್ಗೆ 10.30 ರಿಂದ 11.50ರ ತನಕ ಮತ್ತು ಮಧ್ಯಾಹ್ನ 2.30 ರಿಂದ 3.50ರ ತನಕ ಸಿಇಟಿ ಪರೀಕ್ಷೆಗಳು ನಡೆಯಲಿದೆ.
ಮೇ 20ರಂದು ಬೆಳಗ್ಗೆ 10.30 ಗಂಟೆಯಿಂದ 11.50 ಗಂಟೆಯವರೆಗೆ ಜೀವಶಾಸ್ತ್ರ ಹಾಗೂ ಮಧ್ಯಾಹ್ನ 2.30 ರಿಂದ 3.50 ಗಂಟೆಯವರೆಗೆ ಗಣಿತ ಪರೀಕ್ಷೆ ನಡೆಯಲಿದೆ. ಮೇ 21 ರಂದು ಬೆಳಗ್ಗೆ 10.30 ಗಂಟೆಯಿಂದ 11.50 ಗಂಟೆಯವರೆಗೆ ಭೌತಶಾಸ್ತ್ರ ಹಾಗೂ ಮಧ್ಯಾಹ್ನ 2.30 ರಿಂದ 3.50 ಗಂಟೆಯವರೆಗೆ ರಾಸಾಯನಶಾಸ್ತ್ರ ಪರೀಕ್ಷೆ ನಡೆಯಲಿದೆ.
ಎಲ್ಲಾ ಪರೀಕ್ಷಾ ಕೇಂದ್ರದ ಕೊಠಡಿಗಳಲ್ಲಿ ಸಿಸಿಟಿವಿ ಅಳವಡಿಕೆ ಮಾಡಲಾಗಿದೆ. ಪರೀಕ್ಷೆ ಬರೆಯುವ ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಎಲ್ಲಾ ಸೂಚನೆಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು ಎಂದು ನಿರ್ದೇಶನ ನೀಡಲಾಗಿದೆ.
ವಿದ್ಯಾರ್ಥಿಗಳಿಗೆ ಸೂಚನೆಗಳು;
*ಪರೀಕ್ಷಾ ಕೊಠಡಿ ಒಳಗೆ ಯಾವುದೇ ರೀತಿಯ ಆಧುನಿಕ ಎಲೆಕ್ಟ್ರಾನಿಕ್ ಉಪಕರಣಗಳನ್ನು (ಮೊಬೈಲ್, ಬ್ಲೂ ಟೂತ್, ಸ್ಲೈಡ್ ರೂಲ್ಸ್, ಕ್ಯಾಲ್ಕುಲೇಟರ್, ವೈಟ್ ಪ್ಲೂಯಿಡ್, ವೈಯರ್ ಲೆಸ್ ಸೆಟ್ಸ್ ಮತ್ತಿತರ) ನಿಷೇಧಿಸಲಾಗಿದೆ.
*ಸಿಇಟಿ ಪರೀಕ್ಷೆಗೆ ಆಗಮಿಸುವ ವಿದ್ಯಾರ್ಥಿಗಳು ಪರೀಕ್ಷಾ ಕೊಠಡಿಗೆ ಯಾವುದೇ ರೀತಿಯ ಕೈಗಡಿಯಾರವನ್ನು ಕಟ್ಟಿಕೊಂಡು ಅಥವಾ ತೆಗೆದುಕೊಂಡು ಹೋಗುವಂತಿಲ್ಲ.
*ಕ್ಯಾಲ್ಕುಲೇಟರ್ ಅಥವಾ ಲಾಗ್ ಟೇಬಲ್ಗಳ ಉಪಯೋಗವನ್ನು ಪರೀಕ್ಷಾ ಸಮಯದಲ್ಲಿ ನಿಷೇಧಿಸಲಾಗಿದೆ.
*ಸಿಇಟಿ ಪರೀಕ್ಷೆ ನಡೆಯುವ ಪ್ರತಿ ಪರೀಕ್ಷಾ ಕೇಂದ್ರಕ್ಕೆ ವೀಕ್ಷಕರನ್ನು ಹಾಗೂ ಎಲ್ಲಾ ಪರೀಕ್ಷಾ ಕೇಂದ್ರಗಳ ಕೊಠಡಿಗಳಿಗೆ ಸಿಸಿ ಕ್ಯಾಮರಾ ಅಳವಡಿಕೆ ಮಾಡಲಾಗಿದೆ. ಕೊಠಡಿ ಮೇಲ್ವಿಚಾರಕರು. ಪರೀಕ್ಷೆ ಉಸ್ತುವಾರಿ ನೋಡಿಕೊಳ್ಳುತ್ತಾರೆ.
*ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಸ್ಥಳವೆಂದು ಘೋಷಿಸಲಾಗಿದೆ. ಸೂಕ್ತ ಪೊಲೀಸ್ ಭದ್ರತೆ ನೀಡುವಂತೆ ಪೊಲೀಸ್ ಇಲಾಖೆಯೂ ಸೂಚನೆ ನೀಡಲಾಗಿದೆ.
*ಎಲ್ಲಾ ಕೇಂದ್ರಗಳಿಗೆ ಆರೋಗ್ಯ ಸಹಾಯಕರನ್ನು ನೇಮಿಸುವಂತೆ ಆರೋಗ್ಯ ಇಲಾಖೆಗೆ ಮತ್ತು ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿ ವಿದ್ಯುತ್ ಸಂಪರ್ಕ ವ್ಯತ್ಯಯವಾಗದಂತೆ ಎಚ್ಚರವಹಿಸುವಂತೆ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ಕೊಡಲಾಗಿದೆ.
*ವಿದ್ಯಾರ್ಥಿಗಳು ತುಂಬು ತೋಳಿನ ಶರ್ಟ್ ಹಾಗೂ ಆಭರಣಗಳನ್ನು ಧರಿಸುವುದನ್ನು ನಿಷೇಧಿಸಲಾಗಿದೆ.
*ಪರೀಕ್ಷೆಗಳು ಆರಂಭವಾಗುವ ಸಮಯಕ್ಕಿಂತ ಸಾಕಷ್ಟು ಮುಂಚಿತವಾಗಿ ವಿದ್ಯಾರ್ಥಿಗಳು ಕೇಂದ್ರದಲ್ಲಿ ಹಾಜರಿರುವಂತೆ ಹಾಗೂ ತಮ್ಮ ಪರೀಕ್ಷಾ ಪ್ರವೇಶ ಪತ್ರದ ಜೊತೆ ಯಾವುದಾದರೊಂದು ಗುರುತಿನ ಚೀಟಿಯನ್ನು (ಕಾಲೇಜಿನ ಗುರುತಿನ ಚೀಟಿ, ಬಸ್ ಪಾಸ್, ಡ್ರೈವಿಂಗ್ ಲೈಸೆನ್ಸ್, ಪಾಸ್ಪೋರ್ಟ್, ಆಧಾರ್ ಕಾರ್ಡ್, ಪಾನ್ ಕಾರ್ಡ್) ತರಬೇಕು ಎಂದು ಸೂಚನೆಯನ್ನು ನೀಡಲಾಗಿದೆ.