ಬೆಂಗಳೂರು: ಶಾಲಿಮಾರ್- ಚೆನ್ನೈ ಕೋರಮಂಡಲ್ ಎಕ್ಸ್ಪ್ರೆಸ್, ಗೂಡ್ಸ್ ರೈಲು ಹಾಗೂ ಬೆಂಗಳೂರು- ಹೌರಾ ಎಕ್ಸ್ಪ್ರೆಸ್ ರೈಲಿನ ನಡುವೆ ಒಡಿಶಾದಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತ ಸ್ಥಳಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಇಂದು ಮಧ್ಯಾಹ್ನ ವಾಯುಪಡೆಯ ಹೆಲಿಕಾಪ್ಟರ್ ನಲ್ಲಿ ಬಾಲಸೋರ್ ಗೆ ಆಗಮಿಸಿ ಅಲ್ಲಿಂದ ಬಹನಾಗಾ ಬಜಾರ್ ನಿಲ್ದಾಣದ ಘಟನಾ ಸ್ಥಳಕ್ಕೆ ಪ್ರಧಾನಿ ಭೇಟಿ ನೀಡಿದ್ದಾರೆ.
ಈ ವೇಳೆ ಸತತವಾಗಿ ರೈಲ್ವೆ ಅಧಿಕಾರಿಗಳ ಜೊತೆ ಸಂಪರ್ಕದಲ್ಲಿರುವ ರೈಲ್ವೆ ಸಚಿವ ಅಶ್ವಿನ್ ವೈಷ್ಣವ್, ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಹಾಗೂ ಇತರೆ ಹಿರಿಯ ಅಧಿಕಾರಿಗಳು ಸ್ಥಳದಲ್ಲಿದ್ದರು. ಪ್ರಧಾನಿ ಮೋದಿಗೆ ಅಧಿಕಾರಿಗಳು ಹಾಗೂ ರಕ್ಷಣಾ ಪಡೆ ದುರಂತದ ಬಗ್ಗೆ ಹಾಗೂ ರಕ್ಷಣಾ ಕಾರ್ಯಾಚರಣೆ ಕುರಿತು ಮಾಹಿತಿ ನೀಡಿದ್ದಾರೆ.
ಅಧಿಕಾರಿಗಳಿಂದ ಮಾಹಿತಿ ಪಡೆದ ಬಳಿಕ ಪ್ರಧಾನಿ ಮೋದಿ ಅವರು ಬಾಲಸೋರ್ ನ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ, ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ. ಈವರೆಗೆ ರೈಲು ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 288ಕ್ಕೆ ಏರಿಕೆಯಾಗಿದ್ದು, 900ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.