ಕಾಂಗ್ರೆಸ್ ಗ್ಯಾರಂಟಿಗಳಲ್ಲಿ ಒಂದಾದ ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2 ಸಾವಿರ ನೀಡುವ ಗೃಹಲಕ್ಷ್ಮೀ ಯೋಜನೆಗೆ ಸರ್ಕಾರದಿಂದ ಅಧಿಕೃತ ಮಾರ್ಗಸೂಚಿ ಬಿಡುಗಡೆಯಾಗಿದೆ. ನೂತನ ಸರ್ಕಾರವು ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು 2000 ನೀಡುವ ಗೃಹಲಕ್ಷ್ಮೀ ಯೋಜನೆಯನ್ನು ಜಾರಿಗೆ ತಂದಿದೆ.
ಗೃಹಲಕ್ಷ್ಮೀ ಯೋಜನೆಯ ಪ್ರಮುಖ ಷರತ್ತುಗಳೇನು?
*ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ವಿತರಿಸುವ ಅಂತ್ಯೋದಯ, ಬಿಪಿಎಲ್ ಮತ್ತು ಎಪಿಎಲ್ ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿರುವ ಮಹಿಳೆಯು ಈ ಯೋಜನೆಯ ಅರ್ಹ ಫಲಾನುಭವಿಯಾಗಿರುತ್ತಾರೆ.
*ಒಂದು ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ಮಹಿಳೆಯರಿದ್ದರೆ ಒಂದೇ ಮಹಿಳೆಗೆ ಯೋಜನೆ ಅನ್ವಯವಾಗಲಿದೆ.
*ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿ ಆದಾಯ ಪಾವತಿದಾರರಾಗಿದ್ದಲ್ಲಿ ಸೌಲಭ್ಯ ಸಿಗುವುದಿಲ್ಲ.
*ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿಯು ಜಿಎಸ್ಟಿ ರಿಟರ್ನ್ ಸಲ್ಲಿಸುವವರಾಗಿದ್ದಲ್ಲಿ ಈ ಯೋಜನೆಗೆ ಅರ್ಹರಾಗಿರುವುದಿಲ್ಲ.
*ಈ ಯೋಜನೆಯ ಸೌಲಭ್ಯ ಪಡೆಯಲು ಫಲಾನುಭವಿಯ ಬ್ಯಾಂಕ್ ಖಾತೆ ಮತ್ತು ಆಧಾರ ಕಾರ್ಡ್ ಗಳನ್ನು ಜೋಡಣೆ ಮಾಡಬೇಕು.
*ತಪ್ಪು ಮಾಹಿತಿ ನೀಡಿದರೆ ಗೃಹ ಲಕ್ಷ್ಮೀ ಯೋಜನೆಯಡಿ ನೀಡಿರುವ ಹಣ ವಸೂಲಿ ಮಾಡಲಾಗುತ್ತದೆ.
ತಪ್ಪು ಮಾಹಿತಿ ನೀಡಿ ಸೌಲಭ್ಯ ಪಡೆದರೆ ಕಾನೂನು ಕ್ರಮ:
ಯೋಜನೆಗೆ ಅರ್ಜಿ ಸಲ್ಲಿಸುವರಿಗೆ ಸ್ವಯಂ ಘೋಷಣೆ ಆಧಾರದ ಮೇಲೆ ಮಂಜೂರಾತಿ ನೀಡಲಾಗುತ್ತದೆ. ಅರ್ಜಿಯಲ್ಲಿನ ಅಂಶಗಳ ಬಗ್ಗೆ ತದನಂತರ ಪರಿಶೀಲನೆ ಮಾಡಲಾಗುತ್ತದೆ. ತಪ್ಪು ಮಾಹಿತಿ ನೀಡಿ ಸೌಲಭ್ಯ ಪಡೆದಿರುವುದು ಕಂಡುಬಂದಲ್ಲಿ, ಈಗಾಗಲೇ ಪಾವತಿಸಲಾಗಿರುವ ಹಣವನ್ನು ಅರ್ಜಿದಾರರಿಂದ ವಸೂಲು ಮಾಡಲಾಗುತ್ತದೆ. ಜತೆ ಅಂತಹವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಗೃಹಲಕ್ಷ್ಮೀ ಅರ್ಜಿ ಸಲ್ಲಿಸುವುದು ಹೇಗೆ?
ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳು ಜೂನ್ 15 ರಿಂದ ಜುಲೈ 15 ರವರೆಗೆ ಅರ್ಜಿ ಸಲ್ಲಿಸಬೇಕು. ಆ ನಂತರ ಜುಲೈ 15 ರಿಂದ ಫಲಾನುಭವಿಗಳ ಆಯ್ಕೆ ಮಾಡುವುದು. ಆಯ್ಕೆಗೊಂಡ ಫಲಾನುಭವಿಗಳಿಗೆ ಆಗಸ್ಟ್ 15 ರಂದು ಅವರ ಬ್ಯಾಂಕ್ ಖಾತೆಗೆ ಹಣವನ್ನು ವರ್ಗಾವಣೆ ಮಾಡಲಾಗುತ್ತದೆ. ಅರ್ಜಿದಾರರು ಸೇವಾ ಸಿಂಧು ಪೋರ್ಟಲ್ ಮೂಲಕ ಅಥವಾ ಭೌತಿಕವಾಗಿಯಾಗಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.