ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸೇರಿ 36 ಕಾಂಗ್ರೆಸ್ ಮುಖಂಡರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ಸಮನ್ಸ್ ಜಾರಿ ಮಾಡಿದೆ.
ಈ ಹಿಂದೆ ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟನೆ ವೇಳೆ ನಿಯಮ ಉಲ್ಲಂಘನೆ ಮಾಡಿದ ಆರೋಪದ ಮೇಲೆ ಕಾಂಗ್ರೆಸ್ ಮುಖಂಡರ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 341,143 ಐಪಿಸಿ ಮತ್ತು 103 ಕೆಪಿ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕರ-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯದ 42ನೇ ಎಸಿಎಂಎಂ ಕೋರ್ಟ್ ನ್ಯಾಯಧೀಶೆ ಜೆ ಪ್ರೀತ್ ಮಂಗಳವಾರ ವಿಚಾರಣೆ ನಡೆಸಿ ಜನಪ್ರತಿನಿಧಿಗಳಿಗೆ ಸಮನ್ಸ್ ಜಾರಿಗೊಳಿಸಿದ್ದಾರೆ. ಜುಲೈ 28ರಂದು ಖುದ್ದು ಹಾಜರಾಗುವಂತೆ ಸಿಎಂ, ಡಿಸಿಎಂಗೆ ಸೂಚನೆಯನ್ನು ನೀಡಲಾಗಿದೆ.
2023 ಏಪ್ರಿಲ್ 14 ರಂದು ಗುತ್ತಿಗೆದಾರ ಸಂತೋಷ್ ಪಾಟೀಲ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ಸಂಪುಟದಿಂದ ಕೈಬಿಡುವಂತೆ ಕಾಂಗ್ರೆಸ್ ಮುಖಂಡರು, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ನಿವಾಸದ ಮುಂದೆ ಪ್ರತಿಭಟನೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಹಾಗೂ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಸೇರಿದಂತೆ ಒಟ್ಟು 36 ಕಾಂಗ್ರೆಸ್ ನಾಯಕರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.
ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಯಾವುದೇ ಪೂರ್ವಾನುಮತಿ ಪಡೆಯದೇ ಸಾರ್ವಜನಿಕ ಪ್ರತಿಭಟನೆ ನಡೆಸಿದ್ದಾರೆ. ಅಕ್ರಮವಾಗಿ ಗುಂಪು ಸೇರಿ ಸಾರ್ವಜನಿಕರಿಗೆ ತೊಂದರೆ ಉಂಟು ಮಾಡಿದ್ದಾರೆ ಎಂದು ಆರೋಪಿಸಿ ಮಹಿಳಾ ಇಎಸ್ಐ ಜಾಹೀದಾ ನೀಡಿದ ದೂರು ಆಧರಿಸಿ ಸ್ವಯಂಪ್ರೇರಿತರಾಗಿ ಆಕ್ರಮಕೂಟ (ಐಪಿಸಿ 143) ಹಾಗೂ ಆಕ್ರಮ ಬಂಧನ (ಐಪಿಸಿ 341) ಆರೋಪ ಹಾಗೂ ಕರ್ನಾಟಕ ಪೊಲೀಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಸುಳ್ಳು ಜಾರಿರಾತು ಆರೋಪ ಕಾಂಗ್ರೆಸ್ ಮೂವರು ನಾಯಕರಿಗೆ ಸಮನ್ಸ್ ಜಾರಿ:
ಪತ್ರಿಕೆಗಳಲ್ಲಿ ಸುಳ್ಳು ಜಾಹೀರಾತು ನೀಡಿ ಪಕ್ಷದ ವರ್ಚಸ್ಸಿಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ಬಿಜೆಪಿ ಸಲ್ಲಿಸಿರುವ ಖಾಸಗಿ ದೂರಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೆ ಜನಪ್ರತಿನಿಧಿಗಳ ಕೋರ್ಟ್ ಮಂಗಳವಾರ ಸಮನ್ಸ್ ಜಾರಿಗೊಳಿಸಿದೆ.
ಇತ್ತೀಚೆಗೆ ನಡೆದ ಕರ್ನಾಟಕ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷವು ರಾಷ್ಟ್ರೀಯ ಮತ್ತು ರಾಜ್ಯದ ಪ್ರಮುಖ ದಿನಪತ್ರಿಕೆಗಳಲ್ಲಿ 2023 ಮೇ 5 ರಂದು ಜಾಹಿರಾತು ನೀಡಿ, ಆಡಳಿತಾರೂಢ ರಾಜ್ಯ ಬಿಜೆಪಿ ಸರ್ಕಾರ ಶೇ 40 ಕಮಿಷನ್ ಸರ್ಕಾರ. ಇದು ಕಳೆದ ನಾಲ್ಕು ವರ್ಷಗಳಲ್ಲಿ 1.50 ಲಕ್ಷ ಕೋಟಿ ರೂಪಾಯಿ ಲೂಟಿ ಹೊಡೆದಿರುವ ಭ್ರಷ್ಟ ಸರ್ಕಾರ ಎಂದು ಆರೋಪಿಸಿದ್ದರು. ಈ ಆರೋಪಕ್ಕೆ ಫಿರ್ಯಾದುದಾರರೇ ಇಲ್ಲ. ಇದು ರಾಷ್ಟ್ರೀಯ ಪಕ್ಷವೊಂದರ ವಿರುದ್ದ ಮಾಡಲಾಗಿರುವ ಆಧಾರ ರಹಿತ ಮಾನಹಾನಿಕರ ಆರೋಪ ಎಂದು ದೂರಿನಲ್ಲಿ ವಿವರಿಸಲಾಗಿದೆ.