ಬೆಂಗಳೂರು: ಅನ್ನಭಾಗ್ಯ ಯೋಜನೆಗೆ ಛತ್ತೀಸ್ ಗಡ ರಾಜ್ಯದಲ್ಲಿ 1.50 ಲಕ್ಷ ಮೆ. ಟನ್ ಅಕ್ಕಿ ಲಭ್ಯವಿದೆ. ಆದರೆ ಸಾರಿಗೆ ವೆಚ್ಚ ಹೆಚ್ಚಾಗಲಿದೆ. ಇಂದು ಸಂಜೆ ಈ ಬಗ್ಗೆ ಮತ್ತೊಂದು ಸಭೆ ಕರೆದಿದ್ದು, ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.
ತೆಲಂಗಾಣದ ಮುಖ್ಯಮಂತ್ರಿಗಳೊಂದಿಗೆ ಖುದ್ದಾಗಿ ಮಾತನಾಡಿದ್ದು, ಅಲ್ಲಿ ಅಕ್ಕಿ ಲಭ್ಯವಿಲ್ಲ ಎಂದು ತಿಳಿಸಿದ್ದಾರೆ ಎಂದರು. ಆಂಧ್ರಪ್ರದೇಶದವರೊಂದಿಗೆ ನಮ್ಮ ಮುಖ್ಯ ಕಾರ್ಯದರ್ಶಿಗಳು ಮಾತನಾಡುತ್ತಿದ್ದಾರೆ ಎಂದು ತಿಳಿಸಿದರು.
ರಾಜ್ಯದಲ್ಲಿಯೇ ಅಕ್ಕಿ ಲಭ್ಯವಿದೆ. ಕಮಿಷನ್ ಆಮಿಷಕ್ಕೆ ಹೊರರಾಜ್ಯಗಳಿಂದ ಅಕ್ಕಿ ಖರೀದಿಸಲಾಗುತ್ತಿದೆ ಎಂದು ಬಿಜೆಪಿ ಶಾಸಕ ಬಿ. ವೈ. ವಿಜಯೇಂದ್ರ ಅವರು ಮಾಡಿರುವ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ರಾಜ್ಯದಲ್ಲಿಯೇ ದೊರೆಯುವುದಾದರೆ ಕೊಡಿಸಲಿ ಎಂದರು.