ಬೆಂಗಳೂರು: ಮೂರು ಸ್ಥಾನಗಳಿಗೆ ನಡೆಯುತ್ತಿರುವ ವಿಧಾನಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಕಾಂಗ್ರೆಸ್ನಿಂದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಸಚಿವ ಎನ್.ಎಸ್. ಭೋಸರಾಜು ಹಾಗೂ ತಿಪ್ಪಣ್ಣಪ್ಪ ಕಮಕನೂರ್ ಅವರಿಗೆ ಹೈಕಮಾಂಡ್ ಟಿಕೆಟ್ ನೀಡಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ರಾಜ್ಯದ ಮೂವರು ಕಾಂಗ್ರೆಸ್ ನಾಯಕರ ಹೆಸರು ಪ್ರಕಟಿಸಿದ್ದು, ಇವರು ಪಕ್ಷದ ಅಧಿಕೃತ ಅಭ್ಯರ್ಥಿಗಳಾಗಿ ನಾಳೆ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ವಿಧಾನಸಭೆ ಚುನಾವಣೆಗೂ ಮುನ್ನ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿ, ಬಳಿಕ ಸೋಲು ಕಂಡಿದ್ದ ಜಗದೀಶ್ ಶೆಟ್ಟರ್ಗೆ ಪರಿಷತ್ ಟಿಕೆಟ್ ನೀಡಲಾಗಿದೆ.
ವಿಧಾನಸಭೆ ಚುನಾವಣೆಗೂ ಮುನ್ನ ನಡೆದ ಬೆಳವಣಿಗೆಯಲ್ಲಿ ಬಿಜೆಪಿ ತೊರೆದಿದ್ದ ಬಾಬುರಾವ್ ಚಿಂಚನಸೂರು, ಆರ್. ಶಂಕರ್ ಮತ್ತು ಲಕ್ಷ್ಮಣ ಸವದಿ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದರಿಂದಾಗಿ ತೆರವಾದ ಮೂರು ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ. ಚಿಂಚನಸೂರ್ ಸದಸ್ಯತ್ವದ ಅವಧಿ 2024ರ ಜೂ.17 ವರೆಗೆ, ಶಂಕರ್ ಸದಸ್ಯತ್ವ 2026 ಜೂ.30ರ ವರೆಗೆ ಹಾಗೂ ಸವದಿ ಸದಸ್ಯತ್ವ ಅವಧಿ 2028ರ ಜೂನ್ 14ರವರೆಗೆ ಇತ್ತು. ಈ ಮೂರು ಸ್ಥಾನಗಳಿಗೆ ನಡೆಯುವ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಅವಿರೋಧ ಆಯ್ಕೆ ನಿಶ್ಚಿತವಾಗಿದೆ. ಮಾಜಿ ಎಂಎಲ್ಸಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪಕ್ಕಾ ಬೆಂಬಲಿಗ ಹಾಗೂ ಶಿಷ್ಯ ಎಂದೇ ಗುರುತಿಸಿಕೊಂಡಿರುವ ಸದಸ್ಯ ತಿಪ್ಪಣ್ಣಪ್ಪ ಕಮಕನೂರ್ ಅವರ ಆಯ್ಕೆ ಅಚ್ಚರಿ ಮೂಡಿಸಿದೆ.
ಚುನಾವಣಾ ಪ್ರಕ್ರಿಯೆ: ವಿಧಾನ ಪರಿಷತ್ ಮೂರು ಸ್ಥಾನಗಳ ಉಪಚುನಾವಣೆಗೆ ಜೂನ್ 13 ರಂದು ಅಧಿಸೂಚನೆ ಹೊರಡಿಸಲಾಗಿತ್ತು. ಜೂನ್ 20ರಂದು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಜೂನ್ 21ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಜೂನ್ 23ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕವಾಗಿದೆ. ವಿಧಾನಸಭೆ ಶಾಸಕರ ಸಂಖ್ಯಾಬಲದ ಆಧಾರದ ಮೇಲೆ ಮೂವರನ್ನು ಗೆಲ್ಲಿಸಿಕೊಳ್ಳುವುದು ಕಾಂಗ್ರೆಸ್ಗೆ ಸುಲಭವಾಗಿದೆ. ಸೋಲುವುದು ಖಚಿತ ಎಂಬ ಹಿನ್ನೆಲೆ ಬೇರೆ ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಿಲ್ಲ.
ಜೂನ್ 30 ರಂದು ಬೆಳಿಗ್ಗೆ 9 ರಿಂದ ಸಂಜೆ 4 ರವರೆಗೆ ವಿಧಾನಸಭಾ ಸದಸ್ಯರು ಮತ ಚಲಾಯಿಸುವ ಮೂಲಕ ಮತದಾನ ನಡೆಯಲಿದೆ. ಅದೇ ದಿನ ಸಂಜೆ 5 ಗಂಟೆಗೆ ಮತ ಎಣಿಕೆ ನಡೆಯಲಿದ್ದು, ಜುಲೈ 4ರೊಳಗೆ ಚುನಾವಣೆ ಪ್ರಕ್ರಿಯೆ ಪೂರ್ಣಗೊಳ್ಳಬೇಕು ಎಂದು ಆಯೋಗ ತಿಳಿಸಿದೆ.