ಬೆಂಗಳೂರು: ನಗರ ಪೊಲೀಸ್ ಇಲಾಖೆಯಿಂದ ನಗರದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶೋತ್ಸವ ಆಚರಿಸುವವರಿಗೆ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಅನುಮತಿ, ಮೆರವಣಿಗೆ, ಸುರಕ್ಷತೆ ಸೇರಿದಂತೆ ವಿವಿಧ ವಿಷಯಗಳನ್ನು ಉಲ್ಲೇಖಿಸಲಾಗಿದೆ.
ಸಾರ್ವಜನಿಕವಾಗಿ ಗಣೇಶ ಕೂರಿಸುವವರು ಕಡ್ಡಾಯವಾಗಿ ಸ್ಥಳೀಯ ಪೊಲೀಸ್ ಠಾಣೆಯ ಅನುಮತಿ ಪಡೆಯಬೇಕು. ಗಣೇಶ ವಿಗ್ರಹ ಪ್ರತಿಷ್ಠಾಪನೆ ಹಾಗೂ ಇತರೆ ಕಾರ್ಯಕ್ರಮಗಳ ಹೆಸರಿನಲ್ಲಿ ಬಲವಂತವಾಗಿ ವಂತಿಗೆ ಸಂಗ್ರಹಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಎಚ್ಚರಿಸಿದ್ದಾರೆ.
ಸಾರ್ವಜನಿಕ ಸ್ಥಳಗಳಲ್ಲಿ ಗಣೇಶಮೂರ್ತಿ ಪ್ರತಿಷ್ಠಾಪನೆ ಮಾಡುವಾಗ ಸಾರ್ವಜನಿಕರು ಹಾಗೂ ವಾಹನ ಸಂಚಾರಕ್ಕೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಚಪ್ಪರ, ಶಾಮಿಯಾನ ಹಾಕಲು ಬಿಬಿಎಂಪಿಯಿಂದ ಪರವಾನಗಿ ಪಡೆಯಬೇಕು. ಸಂಚಾರ ಒತ್ತಡವಿರುವ ರಸ್ತೆಗಳಲ್ಲಿ ಗಣೇಶ ಪ್ರತಿಷ್ಠಾಪನೆಗೆ ಅವಕಾಶವಿಲ್ಲ ಎಂದು ತಿಳಿಸಿದ್ದಾರೆ.
ವಿಸರ್ಜನಾ ಕಾರ್ಯಕ್ರಮಕ್ಕೆ ಮಾರ್ಗಸೂಚಿಗಳು
• ಗಣೇಶ ಪ್ರತಿಷ್ಠಾಪನಾ ಸ್ಥಳದಲ್ಲಿ ಹಾಗೂ ಸುತ್ತಮುತ್ತ ಅಡುಗೆ ಮಾಡುವ ಕಟ್ಟಿಗೆ, ಉರುವಲು, ಸೀಮೆಎಣ್ಣೆ ಸಾಧನಗಳನ್ನು ಇರಿಸಬಾರದು ಹಾಗೂ ಅಡುಗೆ ಮಾಡಬಾರದು.
• ವಿದ್ಯುತ್ ಮತ್ತು ವಿದ್ಯುತ್ ದೀಪ ಅಲಂಕಾರಕ್ಕೆ ಸಂಬಂಧಿಸಿದಂತೆ ಬೆಸ್ಕಾಂ ಇಲಾಖೆಯಿಂದ ಅನುಮತಿ ಪಡೆಯಬೇಕು. ಅಗ್ನಿಶಾಮಕ ದಳ ಹಾಗೂ ಸಂಚಾರ ಪೊಲೀಸರಿಂದ ನಿರಾಕ್ಷೇಪಣಾ ಪತ್ರ ಪಡೆಯಬೇಕು.
• ಗಣೇಶ ಪ್ರತಿಷ್ಠಾಪನಾ ಸ್ಥಳದಲ್ಲಿ ದಿನದ 24 ತಾಸು ಸಮರ್ಪಕ ಬೆಳಕಿನ ವ್ಯವಸ್ಥೆ ಮಾಡಬೇಕು. ಸಾರ್ವಜನಿಕರ ಆಗಮನ ಮತ್ತು ನಿರ್ಗಮನಕ್ಕೆ ವ್ಯವಸ್ಥೆ ಮಾಡಬೇಕು, ಜನದಟ್ಟಣೆ ನಿಯಂತ್ರಿಸಲು ಬ್ಯಾರಿಕೇಡ್ ಅಳವಡಿಸಬೇಕು, ಸ್ವಯಂ ಸೇವಕರನ್ನು ನಿಯೋಜಿಸಬೇಕು.
• ಗಣೇಶ ವಿಸರ್ಜನಾ ಮೆರವಣಿಗೆ ಸಂದರ್ಭದಲ್ಲಿ ಯಾವುದೇ ಅಪರಾಧಗಳು ನಡೆದರೆ ಆಯೋಜಕರೇ ಜವಾಬ್ದಾರರು, ಗಣೇಶ ಪ್ರತಿಷ್ಠಾಪನೆ, ಮನರಂಜನಾ ಕಾರ್ಯಕ್ರಮ, ಮೆರವಣಿಗೆ, ವಿಸರ್ಜನಾ ಸ್ಥಳಗಳಲ್ಲಿ ಹೆಣ್ಣು ಮಕ್ಕಳನ್ನು ಚುಡಾಯಿಸುವುದು, ಕೀಟಲೆ ಮಾಡದಂತೆ ಆಯೋಜಕರೇ ಪೂರ್ಣ ಜವಾಬ್ದಾರಿ ವಹಿಸಬೇಕು.
• ಬೆಳಗ್ಗೆ 6 ಗಂಟೆಯಿಂದ ರಾತ್ರಿ 10 ಗಂಟೆವರೆಗೆ ಮಾತ್ರ ಧ್ವನಿವರ್ಧಕ ಬಳಸಬೇಕು. ಇದಕ್ಕೆ ಸ್ಥಳೀಯ ಪೊಲೀಸರ ಅನುಮತಿ ಪಡೆಯಬೇಕು. ಇದನ್ನು ಕಟ್ಟುನಿಟ್ಟಾಗಿ ಪಾಲಿಸದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಕಡಿಮೆ ಮಟ್ಟದ ಶಬ್ಧ ಇರಬೇಕು, ಡಿಜೆ ಅಳವಡಿಕೆಗೆ ಅವಕಾಶವಿಲ್ಲ.
• ಗಣೇಶೋತ್ಸವ ಸಮಿತಿ, ಸಂಘಟಕರು, ಆಯೋಜನಾ ಸಮಿತಿಗಳ ಅಧ್ಯಕ್ಷರು, ಕಾರ್ಯದರ್ಶಿ ಹಾಗೂ ಇತರೆ ಪದಾಧಿಕಾರಿಗಳ ಹೆಸರು, ವಿಳಾಸ ಮತ್ತು ದೂರವಾಣಿ ಸಂಖ್ಯೆಯನ್ನು ಸಂಬಂಧಪಟ್ಟ ಠಾಣಾಧಿಕಾರಿಗೆ ನೀಡಬೇಕು