ಕನಕದಾಸರು ಪ್ರಸಿದ್ಧ ಕವಿ, ತತ್ವಜ್ಞಾನಿ ಮತ್ತು ಸಮಾಜ ಸುಧಾರಕರಾಗಿದ್ದರು. ಅವರು ಭಕ್ತಿಗೀತೆಗಳನ್ನು ಸಂಯೋಜಿಸುವಲ್ಲಿಯೂ ಹೆಸರುವಾಸಿಯಾಗಿದ್ದರು. ಕನಕದಾಸರ ಜಯಂತಿಯನ್ನು ಪ್ರಸಿದ್ಧ ಕವಿ ಕನಕದಾಸರ ಜಯಂತಿಯಾಗಿ ಆಚರಿಸಲಾಗುತ್ತದೆ. ಈ ದಿನವು ಬಹಳಷ್ಟು ಮಹತ್ವವನ್ನು ಹೊಂದಿದೆ ಮತ್ತು ಇದನ್ನು ಕರ್ನಾಟಕದಾದ್ಯಂತ ಅಪಾರ ಭಕ್ತಿಯಿಂದ ಆಚರಿಸಲಾಗುತ್ತದೆ.
ಶ್ರೀ ಕನಕದಾಸರ ಮೂಲ ಹೆಸರು -ತಿಮ್ಮಪ್ಪನಾಯಕ ಕರ್ನಾಟಕದಲ್ಲಿ 15-16 ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು. ಕನಕದಾಸರು ಮತ್ತು ಪುರಂದರದಾಸರನ್ನು ಕರ್ನಾಟಕ ಕೀರ್ತನ ಸಾಹಿತ್ಯದ ಅಶ್ವಿನಿ ದೇವತೆಗಳೆಂದು ಬಣ್ಣಿಸಲಾಗಿದೆ. ಕನಕದಾಸರು ದಂಡನಾಯಕರಾಗಿದ್ದು ಯುದ್ಧವೊಂದರಲ್ಲಿ ಸೋತ ಅವರಿಗೆ ಉಪರತಿ/ವೈರಾಗ್ಯ ಉಂಟಾಗಿ, ಹರಿಭಕ್ತರಾದರು ಎಂದು ಬಣ್ಣಿಸಲಾಗುತ್ತಿದೆ.
ಕನಕದಾಸರು ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಬಾಡ ಗ್ರಾಮದಲ್ಲಿ 1509ರಲ್ಲಿ ಕುರುಬ ಜನಾಂಗಕ್ಕೆ ಸೇರಿದ ಬಚ್ಚಮ್ಮ ಮತ್ತು ಬೀರಪ್ಪನಾಯಕ ಎಂಬ ದಂಪತಿಗಳ ಮಗನಾಗಿ ಜನಿಸಿದರು. ಕನಕದಾಸರು ಬರಿ ಕುರುಬ ಜಾತಿಗೆ ಸೀಮಿತವಾಗದೆ ಎಲ್ಲಾ ಜಾತಿಗಳಿಗೆ ಬೇಕಾದವರಾಗಿದ್ದಾರೆ. 15 – 16 ನೆಯ ಶತಮಾನದಲ್ಲೇ ಜಾತಿ ವ್ಯವಸ್ಥೆಯ ಬಗ್ಗೆ ಸಮರ ಸಾರಿದ ಭಕ್ತ ಎಂದರೆ ಕನಕದಾಸರು ಎಂದರೆ ತಪ್ಪಾಗಲಾರದು. ಕನಕದಾಸರು ಅನೇಕ ಕೀರ್ತನೆಗಳನ್ನು ರಚಿಸಿದ್ದಾರೆ.
.
ತಿಮ್ಮಪ್ಪನಾಯಕ ಒಬ್ಬ ಸೇನಾಧಿಪತಿಯ ಮಗನಾಗಿ ಜನಿಸಿ, ಬಾಲ್ಯದಲ್ಲಿಯೇ ಅಕ್ಷರಾಭ್ಯಾಸ, ಬಂಕಾಪುರದ ಶ್ರೀನಿವಾಸಾಚಾರ್ಯರ ಬಳಿ ವಿದ್ಯಾಭ್ಯಾಸವಾಗಿ, ವ್ಯಾಕರಣ, ತರ್ಕ, ಮೀಮಾಂಸೆ, ಸಾಹಿತ್ಯಗಳಲ್ಲಿ ಪಾರಂಗತನಾದನು. ಜೊತೆಗೆ ಕತ್ತಿವರಸೆ, ಕುದುರೆ ಸವಾರಿಯನ್ನೂ ಕಲಿತ. ಕೆಲವು ವರ್ಷಗಳಲ್ಲಿ ಬೀರಪ್ಪನಾಯಕ ಮತ್ತು ಬಚ್ಚಮ್ಮ ತೀರಿಕೊಂಡರು. ತಂದೆಯ ಬಳಿಕ ತಿಮ್ಮಪ್ಪ ನಾಯಕ ತನ್ನ ಕಿರಿವಯಸ್ಸಿನಲ್ಲಿಯೇ ಬಂಕಾಪುರ ಪ್ರಾಂತಕ್ಕೆ ಡಣ್ಣಾಯಕನಾದ.
ಕನಕದಾಸರು ಶ್ರೀ ವ್ಯಾಸರಾಯರ ಮೆಚ್ಚಿನ ಶಿಷ್ಯರು. ವ್ಯಾಸರಾಯದಿಂದ ಮಧ್ವ ತತ್ವಶಾಸ್ತ್ರವನ್ನು ಕಲಿತು ಒಪ್ಪಿಕೊಂಡ ಕನಕದಾಸರು ಉಡುಪಿ ಶ್ರೀ ಕೃಷ್ಣನ ಅನನ್ಯ ಭಕ್ತರು. ಕಾಗಿನೆಲೆಯ ಆದಿಕೇಶವನ ಭಕ್ತರಾದ ಕನಕದಾಸರು ಜಾತಿಪದ್ಧತಿಯ ತಾರತಮ್ಯಗಳನ್ನು ಅಲ್ಲಗಳೆದರು. ಇವರ ಕೀರ್ತನೆಗಳ ಅಂಕಿತ ಕಾಗಿನೆಲೆಯ ಆದಿಕೇಶವರಾಯ ಎಂಬುದನ್ನು ಸರಿಸಬಹುದು.
ಕನಕದಾಸರು ಸಾಹಿತ್ಯದ ವಿವಿಧ ಪ್ರಕಾರಗಳಾದ ಕೀರ್ತನೆಗಳು, ಸುಳಾದಿಗಳು, ಉಗಾಭೋಗಗಳು ಕನ್ನಡ ಸಾಹಿತ್ಯ ಲೋಕಕ್ಕೆ ಅರ್ಪಿಸಿರುವುದಲ್ಲದೆ, ಸಂಗೀತ ಪ್ರಪಂಚಕ್ಕೆ ತನ್ನದೇ ಆದಂತಹ ಕೊಡುಗೆಯನ್ನು ಮುಂಡಿಗೆಗಳ ರೂಪದಲ್ಲಿ ನೀಡಿದ್ದಾರೆ. ಸುಮಾರು 316 ಕೀರ್ತನೆಗಳು ಹಾಗೂ ಇನ್ನಿತರ ಸಾಹಿತ್ಯ ಮಾತ್ರ ಲಭ್ಯವಾಗಿರುವುದನ್ನು ಕಾಣಬಹುದಾಗಿದೆ. ಅವರ ಐದು ಮುಖ್ಯ ಕಾವ್ಯಕೃತಿಗಳು ಮೋಹನತರಂಗಿಣಿ, ನಳಚರಿತ್ರೆ, ರಾಮಧಾನ್ಯ ಚರಿತೆ, ಹರಿಭಕ್ತಿಸಾರ, ನೃಸಿಂಹಸ್ತವ (ದೊರೆತಿಲ್ಲ), ಮೋಹನತರಂಗಿಣಿ ಪ್ರಮುಖವಾಗಿದೆ.
ಕನಕದಾಸರು 316 ಕೀರ್ತನೆಗಳನ್ನು ರಚಿಸಿದ್ದಾರೆ. ಕನಕದಾಸರ ಭಕ್ತಿ ಪಾರಮ್ಯವನ್ನು ಅವರ ಕೀರ್ತನೆಗಳಲ್ಲಿ ಕಾಣಬಹುದು. ಶ್ರೀಹರಿಯನ್ನು ತಮ್ಮ ಧಣಿಯಾಗಿ, ಇನಿಯನಾಗಿ, ಅಣೋರಣೀಯನಾಗಿ, ಮಹತೋಮಹೀಮನಾಗಿ ಅವರು ಕಂಡಿದ್ದಾರೆ. ‘ಬಾ ರಂಗ ಎನ್ನ ಮನಕೆ ಎಂದು ಹೃದಯ ಸದನಕ್ಕೆ ‘ಎಂದು ಕರೆದು ನೆಲೆ ನಿಲ್ಲಿಸಿಕೊಂಡ ಅನುಭಾವ ಅವರದು. ಒಳಗಣ್ಣಿನಿಂದ ಅವನ ಕಂಡು- ‘ಕಂಡೆ ನಾ ತಂಡ ತಂಡ ಹಿಂಡು ದೈವ ಪ್ರಚಂಡ ರಿಪು ಗಂಡ ಉದ್ಧಂಡ ನರಸಿಂಹನ’ ಎಂದು ಸಂತೋಷಪಟ್ಟಿದ್ದಾರೆ. ‘ಎಲ್ಲಿ ನೋಡಿದರಲ್ಲಿ ರಾಮ’ ಎಂಬ ಅನುಭೂತಿಯಲ್ಲಿ ಹರಿಯನ್ನು ಕಂಡ ಬಳಿಕ ‘ಬದುಕಿದೆನು ಬದುಕಿದೆನು ಭವ ಎನಗೆ ಹಿಂಗಿತು’ ಎಂಬ ಧನ್ಯತಾಭಾವ. ‘ದಾಸದಾಸರ ಮನೆಯ ದಾಸಿಯರ ಮಗ ಮಂಕುದಾಸ ಮರುಳುದಾಸ ನರಜನ್ಮಹುಳು ಪರಮಪಾಪಿ’ ಎಂದು ಕರೆದುಕೊಂಡಿದ್ದ ಅವರು ಜೀವ ಮಾಗಿ ಹಣ್ಣಾದಂತೆ ಪರಮಾತ್ಮನ ಸಾಕ್ಷಾತ್ಕಾರವಾದಂತೆ ‘ಆತನೊಲಿದ ಮೇಲೆ ಇನ್ಯಾತರ ಕುಲವಯ್ಯಾ’ ಎಂದುಕೊಳ್ಳುತ್ತಾರೆ.
ಜೈನ, ವೀರಶೈವರ ಕಿತ್ತಾಟ, ಮುಸಲ್ಮಾನ ಪ್ರಾಬಲ್ಯ ಇವುಗಳಿಂದ ಸೊರಗಿ ಹೋಗಿದ್ದ ವೈದಿಕ ಧರ್ಮಕ್ಕೆ ಪುನಶ್ಚೇತನ ನೀಡಲು ವ್ಯಾಸರಾಯರಂಥವರು ಶ್ರಮಿಸುತ್ತಿದ್ದ ಕಾಲವದು. ವೈದಿಕ ಸಂಸ್ಕೃತಿಯ ಉತ್ಥಾನಕ್ಕೆಂದು ಹುಟ್ಟು ಹಾಕಲಾದ ವಿಜಯನಗರ ಸಾಮ್ರಾಜ್ಯ ಕೃಷ್ಣದೇವರಾಯನ ಅಳಿವಿನ ನಂತರ ಪತನದ ಹಾದಿ ಹಿಡಿದಿತ್ತು. ಇಂಥಲ್ಲಿ ಕನಕದಾಸರಂಥವರ ಕಾವ್ಯಕೃಷಿ ಹಾಗೂ ಸಾರ್ವಜನಿಕ ಜೀವನ ವ್ಯಾಸರಾಯರಿಗೆ ಬೆಂಬಲದ ಶ್ರೀರಕ್ಷೆಯಾಗಿದ್ದವು.
‘ನಾವು ಕುರುಬರು ನಮ್ಮ ದೇವರು ಬೀರಯ್ಯ ಕಾವ ನಮ್ಮಜ್ಜ ನರಕುರಿ ಹಿಂಡುಗಳ’ ಎಂದು ವಿನೀತ ಜಾತಿ ಭಾವನೆ ತೋರಿದ್ದ ಕನಕದಾಸರು ವ್ಯಾಸರಾಯರ ಸಂಪರ್ಕದ ನಂತರ ‘ಕುಲಕುಲಕುಲವೆಂದು ಹೊಡೆದಾಡದಿರಿ’ ಎಂದು ಜಂಕಿಸಿ ಕೇಳುವ ಹಾಗಾದರು.
ಇಂಥ ನಡವಳಿಕೆಗಳಿಂದ ವೈದಿಕ ಧರ್ಮದ ಗುತ್ತಿಗೆ ತಮ್ಮದು ಎಂದು ಭಾವಿಸಿದ್ದ ಬ್ರಾಹ್ಮಣರಿಗೆ ಕನಕದಾಸರು ಬಿಸಿ ತುಪ್ಪವಾದರು. ಅವರ ಕೀರ್ತನೆಗಳಲ್ಲಿ ಅವರ ಸಂದೇಶ ನೇರ ಮತ್ತು ಖಚಿತ. ಹಾಗೆಯೇ ಅಮೂರ್ತವಾದ ಪ್ರತಿಮಾ ನಿರೂಪಣೆಯಲ್ಲಿ ಪರಿಣತಿ, ಹಾಗೂ ಕನ್ನಡ ಸಾಹಿತ್ಯ ಮತ್ತು ಸಂಸ್ಕೃತ ಸಾಹಿತ್ಯಗಳ ಪರಿಚಯವನ್ನು ಅವರ ಸಾಹಿತ್ಯದಲ್ಲಿ ಕಾಣಬಹುದು.
ಉಡುಪಿಯ ಶ್ರೀ ಕೃಷ್ಣ ದೇವಸ್ಥಾನ ಮತ್ತು ಕನಕದಾಸರು
ಅನೇಕರ ನಂಬಿಕೆಯಂತೆಉಡುಪಿಯ ದೇವಸ್ಥಾನದಲ್ಲಿ ಕನಕದಾಸರಿಗೆ ಪ್ರವೇಶ ದೊರೆಯದೆ ಹೋದಾಗ ದೇವಸ್ಥಾನದ ಹಿಂದೆ ನಿಂತು ಹಾಡತೊಡಗಿದರಂತೆ “ಬಾಗಿಲನು ತೆರೆದು ಸೇವೆಯನು ಕೊಡೊ ಹರಿಯೆ” ಆಗ ದೇವಸ್ಥಾನದ ಹಿಂಭಾಗ ಗೋಡೆ ಒಡೆದು ಕೃಷ್ಣನ ವಿಗ್ರಹ ಹಿಮ್ಮುಖವಾಗಿ ತಿರುಗಿತಂತೆ. ಈಗಲೂ ಉಡುಪಿ ಶ್ರೀ ಕೃಷ್ಣ ದೇವಸ್ಥಾನದ ಹಿಂದಗಡೆಯ ಗೋಡೆಯಲ್ಲಿರುವ ಬಿರುಕಿನಲ್ಲಿ ಶ್ರೀಕೃಷ್ಣನನ್ನು ಕಾಣಬಹುದು. ಅಲ್ಲಿ ಒಂದು ಕಿಟಕಿಯನ್ನು ನಿರ್ಮಿಸಿ ಅದನ್ನು ‘ಕನಕನ ಕಿಂಡಿ’ ಎಂದು ಕರೆಯಲಾಗಿದೆ.