ಶಿರಸಿ: ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬಂಡಾಳ್ ಗ್ರಾಮದ ಬಳಿ ನಡೆದಿದೆ.
ಮೃತರಲ್ಲಿ ಮೂವರು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಪಟ್ಟಣದವರಾಗಿದ್ದು, ಇನ್ನೊಬ್ಬರು ತಮಿಳುನಾಡು ಮೂಲದವರು ಎಂದು ಪೊಲೀಸರು ತಿಳಿಸಿದ್ದಾರೆ.
ಮೂವರು ಸ್ಥಳದಲ್ಲೇ ಮೃತಪಟ್ಟರೆ, ಇನ್ನಿಬ್ಬರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಹುಬ್ಬಳ್ಳಿಯಿಂದ ಭಟ್ಕಳಕ್ಕೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ಹಾಗೂ ಎದುರಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ಕಾರು ಜಖಂಗೊಂಡಿದ್ದು, ಹಲವಾರು ಬಸ್ ಪ್ರಯಾಣಿಕರು ಗಾಯಗೊಂಡಿದ್ದಾರೆ. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ. ಶಿರಸಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.