ಮಂಗಳೂರು : ಕನ್ನಡ, ತುಳು ಭಾಷೆಯ ಹಿರಿಯ ಸಾಹಿತಿ, ಜಾನಪದ ವಿದ್ವಾಂಸ, ಸಂಶೋಧಕ, ಯಕ್ಷಗಾನ ಪ್ರಸಂಗಕರ್ತ ಅಮೃತ ಸೋಮೇಶ್ವರ (89) ಇಂದು ಬೆಳಗ್ಗೆ ನಿಧನರಾಗಿದ್ದಾರೆ.
ಅಮ್ರತ ಸೋಮೇಶ್ವರರು ಮಂಗಳೂರು ಸಮೀಪದ ಕೋಟೆಕಾರು ಗ್ರಾಮದ ಅಡ್ಕದವರಾಗಿದ್ದಾರೆ.ತಂದೆ ಚಿರಿಯಂಡ ಮತ್ತು ತಾಯಿ ಅಮುಣಿ. ಮಾತೃಭಾಷೆ ಮಲಯಾಳಂ ಆದರೂ ಸಾಹಿತ್ಯ ರಚನೆಗೆ ತೊಡಗಿದ್ದು ತುಳು ಹಾಗೂ ಕನ್ನಡದಲ್ಲಿ. ಕೇಟೆಕಾರಿನ ಸ್ಟೆಲ್ಲ ಮೇರಿಸ್ ಕಾನ್ವೆಂಟ್ ನಲ್ಲಿ ಪ್ರಾಥಮಿಕ ಶಿಕ್ಷಣ ಪಡೆದಿದ್ದ ಇವರು, ನಂತರ ಇಲ್ಲಿನ ಆನಂದಾಶ್ರಮದಲ್ಲಿ ಪ್ರೌಢಶಾಲೆ ವಿಧ್ಯಾಭ್ಯಾಸ ಮಾಡಿದರು. ಅಲೋಶಿಯಸ್ ಕಾಲೇಜಿನಲ್ಲಿ ಪದವಿ ಅಭ್ಯಾಸ ಮಾಡಿದರು. ಖಾಸಗಿಯಾಗಿ ಓದಿ ಕರ್ನಾಟಕ ವಿಶ್ವವಿದ್ಯಾಲಯದಿಂದ ಎಂ. ಎ. ಪದವಿ ಪಡೆದರು. ಆರಂಭದಲ್ಲಿ ಸಂತ ಅಲೋಶಿಯಸ್ ಕಾಲೇಜಿನ ಕನ್ನಡ ವಿಭಾಗದಲ್ಲಿ ಅಧ್ಯಾಪಕರಾಗಿ ವೃತ್ತಿ ಆರಂಭಿಸಿದರು. ಅನಂತರ ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಎರಡು ವರ್ಷ ಕೆಲಸ ಮಾಡಿದರು.
1967ರಿಂದ ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಕನ್ನಡ ವಿಭಾಗದ ಮುಖ್ಯಸ್ಥರಾಗಿ ಕರ್ತವ್ಯವನ್ನು ನಿರ್ವಹಿಸಿ 1993ರಲ್ಲಿ ನಿವ್ರತ್ತರಾದರು. ನಿವ್ರತ್ತಿಯ ನಂತರ ಮಂಗಳೂರು ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ವಿಭಾಗದಲ್ಲಿ ಆಹ್ವಾನಿತ ಪ್ರಾಧ್ಯಾಪಕರಾಗಿ ಕೆಲವು ಕಾಲ ಕಾರ್ಯನಿರ್ವಹಿಸಿದ್ದಾರೆ.
ಕನ್ನಡ ಮತ್ತು ತುಳು ಎರಡೂ ಭಾಷೆಗಳಲ್ಲಿ ವೈವಿಧ್ಯಮಯ ಹಾಗೂ ವಿಸ್ತೃತವಾದ ಸಾಹಿತ್ಯ ಕೃಷಿಯನ್ನು ನಡೆಸಿದ್ದಾರೆ. ಯಕ್ಷಗಾನದ ಬಗ್ಗೆ ವ್ಯಾಪಕ ಸಂಶೋಧನೆ, ಅಧ್ಯಯನ, ಆವಿಷ್ಕಾರ, ಕೃತಿರಚನೆ ಅವರ ಪ್ರಮುಖ ಕಾರ್ಯಕ್ಷೇತ್ರವಾಗಿತ್ತು.