ಬೆಂಗಳೂರು : ರಾಜ್ಯದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 13 ಮಂದಿ ಮೃತಪಟ್ಟಿರುವುದಕ್ಕೆ ಕೇಂದ್ರ ಆಹಾರ, ಗ್ರಾಹಕ ವ್ಯವಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವ ಪ್ರಹ್ಲಾದ್ ಜೋಶಿ ಮತ್ತು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಹಾವೇರಿ ಜಿಲ್ಲೆಯ ಗುಂಡೇನಹಳ್ಳಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಸರ್ಕಾರ ತಕ್ಷಣ ಪರಿಹಾರ ನೀಡಬೇಕು. ದೇವರು ಅವರ ಕುಟುಂಬಗಳಿಗೆ ಶಕ್ತಿ ನೀಡಲಿ. ಗಾಯಗೊಂಡವರ ಚಿಕಿತ್ಸೆಗೆ ರಾಜ್ಯ ಸರ್ಕಾರ ವ್ಯವಸ್ಥೆ ಮಾಡಬೇಕು” ಎಂದು ಕೇಂದ್ರ ಸಚಿವ ಜೋಶಿ ಹೇಳಿದರು.
ಹಾವೇರಿ ಎಸ್ಪಿ ಪ್ರಕಾರ, ರಸ್ತೆಯಲ್ಲಿ ಟ್ರಕ್ ಅನ್ನು ತಪ್ಪಾಗಿ ನಿಲ್ಲಿಸಿದ್ದರಿಂದ ಅಪಘಾತ ಸಂಭವಿಸಿದೆ.
ಚಾಲಕರು ನಿಯಮಗಳನ್ನು ತಪ್ಪದೇ ಪಾಲಿಸಬೇಕು. ಈ ವಿಷಯದಲ್ಲಿ ಯಾವುದೇ ನಿರ್ಲಕ್ಷ್ಯವು ಪ್ರಾಣಹಾನಿಗೆ ಕಾರಣವಾಗುತ್ತದೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ಹಲವು ಗಣ್ಯರು ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.
ಮಾಜಿ ಸಿಎಂ ಹಾಗೂ ಬಿಜೆಪಿ ಸಂಸದ ಬಸವರಾಜ ಬೊಮ್ಮಾಯಿ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿದ್ದು, ಮೃತರ ಕುಟುಂಬಸ್ಥರಿಗಾಗಿ ಪ್ರಾರ್ಥಿಸಿದ್ದಾರೆ.
ರಾಜ್ಯ ಸರ್ಕಾರವು ಮುಖ್ಯಮಂತ್ರಿಗಳ ಪರಿಹಾರ ನಿಧಿಯ ಮೂಲಕ ಪರಿಹಾರ ನೀಡಬೇಕು ಮತ್ತು ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆ ನೀಡಬೇಕು ಎಂದು ಬೊಮ್ಮಾಯಿ ಹೇಳಿದರು.
ಹಾವೇರಿ: ನಿಂತಿದ್ದ ಲಾರಿಗೆ ಟೆಂಪೋ ಟ್ರಾವೆಲರ್ ಡಿಕ್ಕಿ ಹೊಡೆದ ಪರಿಣಾಮ 8 ಮಹಿಳೆಯರು ಮತ್ತು ಇಬ್ಬರು ಮಕ್ಕಳು ಸೇರಿದಂತೆ 13 ಜನರು ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ.