ಮಂಗಳೂರು: ನಾಲ್ಕು ಸಾವಿರ ಕೋಟಿಯ ಮೂಡ ಹಗರಣ ಖಂಡಿಸಿ ಮೈಸೂರಿನಲ್ಲಿ ಆಯೋಜಿಸಿದ್ದ ಪ್ರತಿಭಟನಾ ಸಭೆಗೆ ತೆರಳುತ್ತಿದ್ದ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ ವಿಜಯೇಂದ್ರ, ವಿಪಕ್ಷ ನಾಯಕರಾದ ಆರ್.ಅಶೋಕ್ ಸಹಿತ ಹಲವು ನಾಯಕರನ್ನು ಬೆಂಗಳೂರಿನಲ್ಲಿಯೇ ಬಂಧಿಸಿದ ಕಾಂಗ್ರೆಸ್ ಸರ್ಕಾರದ ವಿರುದ್ಧ ದ.ಕ ಜಿಲ್ಲಾ ಬಿಜೆಪಿ ಕಚೇರಿ ಬಳಿ ಪ್ರತಿಭಟನೆ ನಡೆಯಿತು.
ಪ್ರತಿಭಟನೆಯಲ್ಲಿ ಮಾತನಾಡಿದ ಶಾಸಕ ವೇದವ್ಯಾಸ್ ಕಾಮತ್ ಅವರು, ರಣಹೇಡಿ ಭ್ರಷ್ಟ ಕಾಂಗ್ರೆಸ್ ಸರ್ಕಾರ ವಿಪಕ್ಷಗಳ ಪ್ರತಿಭಟನಾ ಸ್ವಾತಂತ್ರ್ಯವನ್ನು ಹತ್ತಿಕ್ಕಿದೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಸರ್ವಾಧಿಕಾರ ಧೋರಣೆಯ ಮೂಲಕ ರಾಜ್ಯದಲ್ಲಿ ಅಘೋಷಿತ ತುರ್ತು ಪರಿಸ್ಥಿತಿಯ ವಾತಾವರಣ ನಿರ್ಮಾಣವಾಗಿದೆ. ಸಿದ್ದರಾಮಯ್ಯನವರು ಬಿಜೆಪಿಯ ಪ್ರತಿಭಟನೆಯನ್ನು ಹತ್ತಿಕ್ಕಬಹುದು ಆದರೆ ಹಗರಣದದಿಂದ ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ. ಕೈಯಲ್ಲಿ ಸಂವಿಧಾನದ ಪ್ರತಿಯನ್ನು ಹಿಡಿದುಕೊಂಡು ಬಾಯಲ್ಲಿ ಪ್ರಜಾಪ್ರಭುತ್ವ, ಸಂವಿಧಾನ ರಕ್ಷಣೆ, ಅಭಿವ್ಯಕ್ತಿ ಸ್ವಾತಂತ್ರ್ಯವೆನ್ನುತ್ತಾ ತಿರುಗಾಡುವ ರಾಹುಲ್ ಗಾಂಧಿ ಈಗೆಲ್ಲಿದ್ದಾರೆ? ಸಿದ್ದರಾಮಯ್ಯನವರಿಗೆ ತಪ್ಪು ಮಾಡಿದ್ದರಿಂದಲೇ ಭಯ ಕಾಡುತ್ತಿದೆ. ಈ ಕೂಡಲೇ ರಾಜೀನಾಮೆ ಕೊಟ್ಟು ಮನೆಗೆ ಹೋಗಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಶಾಸಕ ಹರೀಶ್ ಪೂಂಜ, ಮಾಜಿ ಶಾಸಕ ಕ್ಯಾ.ಗಣೇಶ್ ಕಾರ್ಣಿಕ್, ಮಾಜಿ ಮೇಯರ್ ಪ್ರೇಮಾನಂದ ಶೆಟ್ಟಿ, ನಂದನ್ ಮಲ್ಯ ಸಹಿತ ಅನೇಕರು ಉಪಸ್ಥಿತರಿದ್ದರು.