ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ಖಂಡಿಸಿ ರೈತರು ರಸ್ತೆಗಿಳಿದು ಹೋರಾಟ ನಡೆಸುತ್ತಿದ್ದು, ಇದೇ ವೇಳೆ ರೈತರ ಪರ ವಿವಿಧ ರಾಜಕೀಯ ನಾಯಕರು, ಕನ್ನಡಪರ ಸಂಘಟನೆಗಳು ಬೆಂಬಲಿಸಿವೆ. ಆದರೆ ಚಿತ್ರರಂಗದ ಯಾವುದೇ ನಟ-ನಟಿಯರು ಧ್ವನಿ ಎತ್ತದೆ ಇರುವುದನ್ನು ಹೋರಾಟಗಾರರು ಗಮನಿಸಿ ಕಿಡಿಕಾರಿದ್ದಾರೆ.
ಈ ಎಲ್ಲಾ ಬೆಳವಣಿಗೆಗಳ ನಡುವೆ ಕರ್ನಾಟಕ- ತಮಿಳುನಾಡು ನಡುವೆ ಕಾವೇರಿ ನೀರಿನ ವಿವಾದ ಪ್ರತಿ ಬಾರಿ ಬಂದಾಗಲು ಸ್ಯಾಂಡಲ್ ವುಡ್ ತಾರೆಯರು ನಮ್ಮ ನಾಡಿನ ರೈತರ ಪರ ಮಾತನಾಡುತ್ತಾರೆ. ಅದರಂತೆಗೆ ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ನಟ ಕಿಚ್ಚ ಸುದೀಪ್ ಹಾಗೂ ನಟ ದರ್ಶನ್ ಪ್ರತಿಕ್ರಿಯೆ ನೀಡಿದ್ದಾರೆ.
ಸ್ನೇಹಿತರೆ, ನಮ್ಮ ಕಾವೇರಿ ನಮ್ಮ ಹಕ್ಕು . ಅಷ್ಟು ಒಮ್ಮತದಿಂದ ಗೆಲ್ಲಿಸಿರುವ ಸರ್ಕಾರ ಕಾವೇರಿಯನ್ನೇ ನಂಬಿರುವ ಜನರನ್ನು ಕೈಬಿಡುವುದಿಲ್ಲ ಎಂದು ನಾನು ನಂಬಿದ್ದೇನೆ . ಈ ಕೂಡಲೇ ತಜ್ಞರು ಕಾರ್ಯತಂತ್ರ ರೂಪಿಸಿ ನ್ಯಾಯ ನೀಡಲಿ ಎಂದು ಒತ್ತಾಯಿಸುತ್ತೇನೆ . ನೆಲ -ಜಲ -ಭಾಷೆಯ ಹೋರಾಟದಲ್ಲಿ ನನ್ನ ಧ್ವನಿಯೂ ಇದೆ. ಕಾವೇರಿ ತಾಯಿ ಕರುನಾಡನ್ನು ಕಾಪಾಡಲಿ ಎಂದು ಕಿಚ್ಚ ಸುದೀಪ್ ತಿಳಿಸಿದ್ದಾರೆ.
ಕರ್ನಾಟಕದ ಪಾಲಿನ ಕಾವೇರಿ ನೀರಿಗೆ ಕತ್ತರಿ ಹಾಕಿ ಮತ್ತಷ್ಟು ನೀರು ಪಡೆದುಕೊಳ್ಳುವ ಪ್ರಯತ್ನ ನಿರಂತರವಾಗಿ ನಡೆದು ಬಂದಿದೆ. ಈ ವರ್ಷ ನೀರಿನ ಅಭಾವ ರಾಜ್ಯದಲ್ಲಿ ಸಾಕಷ್ಟಿದೆ. ಈ ಸಮಯದಲ್ಲಿ ನೀರಾವರಿ ಪ್ರದೇಶಕ್ಕೆ ಹಾನಿಯಾಗುವ ಸಾಧ್ಯತೆ ಬಹಳಷ್ಟು ಇರುವ ಕಾರಣ ಎಲ್ಲಾ ಅಂಕಿ-ಅಂಶಗಳನ್ನು ಪರಿಗಣಿಸಿ ಆದಷ್ಟು ಬೇಗ ನ್ಯಾಯ ಸಿಗುವಂತಾಗಲಿ ಎಂದು ನಟ ದರ್ಶನ್ ತಿಳಿಸಿದ್ದಾರೆ.